ನವದೆಹಲಿ : ಮಾಜಿ ಬಿಜೆಪಿ ನಾಯಕ ಜಸ್ವಂತ್ ಸಿಂಗ್ ಅವರ ತಲೆಗೆ ತೀವ್ರ ಪೆಟ್ಟು ಬಿದ್ದಿದ್ದು ಆ.8ರಂದು ಆಸ್ಪತ್ರೆಗೆ ದಾಖಲಿಸಲಾಗಿದೆ. ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಜಸ್ವಂತ್ ಸಿಂಗ್ ಅವರ ಸ್ಥಿತಿ ಗಂಭೀರವಾಗಿದೆ.
ಗುರುವಾರ ಮಧ್ಯರಾತ್ರಿ ನವದೆಹಲಿಯ ತಮ್ಮ ನಿವಾಸದಲ್ಲಿ ಪ್ರಜ್ನೆ ತಪ್ಪಿ ಬಿದ್ದ ಪರಿಣಾಮ ತಲೆಗೆ ಬಲವಾದ ಪೆಟ್ಟು ಬಿದ್ದಿದ್ದು ಆರ್ಮಿ ರಿಸರ್ಚ್ ಅಂಡ್ ರೆಫೆರಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಧಿಕ ರಕ್ತಸ್ರಾವವಾಗುತ್ತಿದ್ದಿದ್ದರಿಂದ ಜಸ್ವಂತ್ ಸಿಂಗ್ ಗೆ ಶಸ್ತ್ರಚಿಕಿತ್ಸೆ ನಡೆಸಲಾಗಿದೆ.
76 ವರ್ಷದ ಜಸ್ವಂತ್ ಸಿಂಗ್, ಬಿಜೆಪಿ ಮುಖಂಡರಾಗಿದ್ದರು. 2014ರ ಲೋಕಸಭಾ ಚುನಾವಣೆಯಲ್ಲಿ ಬಾರ್ಮರ್ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಬಿಜೆಪಿ ಟಿಕೆಟ್ ನೀಡಲು ನಿರಾಕರಿಸಿತ್ತು. ಇದರಿಂದ ಅಸಮಾಧಾನಗೊಂಡ ಜಸ್ವಂತ್ ಸಿಂಗ್ ಬಿಜೆಪಿ ತೊರೆದು ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಸಚಿವ ಸಂಪುಟದಲ್ಲಿ ಜಸ್ವಂತ್ ಸಿಂಗ್ ಅವರು ರಕ್ಷಣಾ ಸಚಿವರಾಗಿ ಕಾರ್ಯನಿರ್ವಹಿಸಿದ್ದರು.