ಬಳ್ಳಾರಿ : ಕಾಂಗ್ರೆಸ್ ಗೆ ಬೆಂಬಲ ನೀಡದಿದ್ದರೆ ನ್ಯಾಯಬೆಲೆ ಅಂಗಡಿ ವರ್ತಕರ ಲೈಸೆನ್ಸ್ ರದ್ದುಗೊಳಿಸುವುದಾಗಿ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಧಮ್ಕಿ ಹಾಕಿದ್ದಾರೆ ಎಂದು ಸಂಸದ ಶ್ರೀರಾಮುಲು ಆರೋಪಿಸಿದ್ದಾರೆ.
ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ಉಪಚುನಾವಣೆ ಹಿನ್ನಲೆಯಲ್ಲಿ ಚುನಾವಣಾ ಪ್ರಚಾರದ ವೇಳೆ ಮಾತನಾಡಿದ ಅವರು, ಬಿಜೆಪಿ ಮುಖಂಡ ಸೋಮಶೇಖರ್ ರೆಡ್ಡಿ ಅವರ ನಿವಾಸಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ, ಕಾಂಗ್ರೆಸ್ ಕಾರ್ಯಕರ್ತರೇ ಡಿ.ಕೆ.ಶಿವಕುಮಾರ್ ರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಹೀಗಾಗಿ ರಕ್ಷಣೆಗಾಗಿ ಸೋಮಶೇಖರ್ ರೆಡ್ಡಿ ಮನೆಗೆ ಹೋಗಿದ್ದರು ಎಂದು ವ್ಯಂಗ್ಯವಾಡಿದರು.
ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆ ಮತಹಾಕಬೇಕು. ಇಲ್ಲವಾದಲ್ಲಿ ಲೈಸೆನ್ಸ್ ರದ್ದುಮಾಡುವುದಾಗಿ ಇಲ್ಲಿನ ನ್ಯಾಯಬೆಲೆ ಅಂಗಡಿ ವರ್ತಕರಿಗೆ ಡಿ.ಕೆ.ಶಿವಕುಮಾರ್ ಬೆದರಿಕೆ ಹಾಕಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಅಲ್ಲದೇ ಕೆಇಬಿ ನೌಕರರಿಗೂ ಅವರು ಬೆದರಿಕೆ ಹಾಕುವ ಮೂಲಕ ಸಚಿವರಾದ ಡಿ.ಕೆ.ಡಿ.ಕೆ.ಶಿವಕುಮಾರ್ ಅಧಿಕಾರ ದುರುಪಯೋಗಪಡಿಸಿಕೊಂಡಿದ್ದಾರೆ ಎಂದರು.
ಈ ವೇಳೆ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಕೂಡ ಡಿ.ಕೆ.ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದು, ಮುಖ್ಯಮಂತ್ರಿಯಾಗಬೇಕು ಎಂಬ ಆಸೆಯಿಂದ ಬಳ್ಳಾರಿ ಉಸ್ತುವಾರಿಯನ್ನು ವಹಿಸಿಕೊಂಡಿದ್ದಾರೆ. ಈಗ ಬಳ್ಳಾರಿಗೆ ಬಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪಿತೂರಿ ನಡೆಸುತ್ತಿದ್ದಾರೆ ಎಂದರು.
ಒಂದೆಡೆ ಅಪ್ಪ-ಮಕ್ಕಳ ವಿರುದ್ಧ ವಾಗ್ದಾಳಿ ನಡೆಸುವ ಮುಖ್ಯಮಂತ್ರಿ ಸಿದ್ದರಾಮಯ್ಯ ಶಿಕಾರಿಪುರದಲ್ಲಿ ಜೆಡಿಎಸ್ ಜತೆ ಮೈತ್ರಿ ಮಾಡಿಕೊಂಡಿದ್ದಾರೆ. ಶಿಕಾರಿಪುರದಲ್ಲಿ ಕಾಂಗ್ರೆಸ್ ಗೆ ಬಲವಿಲ್ಲವೇ ಎಂದು ಪ್ರಶ್ನಿಸಿದ್ದಾರೆ.