ಬೆಂಗಳೂರು : ದಸರಾ ಬಳಿಕ ಸಚಿವ ಸಂಪುಟ ವಿಸ್ತರಣೆಯಾಗಲಿದೆ. ತಮ್ಮನ್ನು ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳುವ ವಿಶ್ವಾಸವಿದೆ ಎಂದು ರಾಣೆಬೆನ್ನೂರು ಶಾಸಕ ಕೆ.ಬಿ.ಕೋಳಿವಾಡ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಾನು ಹುಟ್ಟು ಕಾಂಗ್ರೆಸ್ಸಿಗ. ಪಕ್ಷಕ್ಕಾಗಿಯೇ ದುಡಿಯುತ್ತೇನೆ. ತಮಗೆ ಸಂಪುಟದಲ್ಲಿ ಸ್ಥಾನ ಸಿಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಸಚಿವ ಸಂಪುಟ ವಿಸ್ತರಣೆ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿ.ಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಸೂಕ್ತ ನಿರ್ಧಾರ ಕೈಗೊಳ್ಳಲಿದ್ದಾರೆ. ಅವರ ಮೇಲೆ ನನಗೆ ವಿಶ್ವಾಸವಿದೆ ಎಂದರು.
ಒಂದು ವೇಳೆ ಸಚಿವ ಸಂಪುಟದಲ್ಲಿ ಸ್ಥಾನ ಸಿಗದಿದ್ದರೂ ಕಾಂಗ್ರೆಸ್ ವಿರುದ್ಧ ತಾವು ಬಂಡಾಯವೇಳುವುದಿಲ್ಲ ಎಂದು ಕೋಳಿವಾಡ ತಿಳಿಸಿದ್ದಾರೆ.
ಕಾಂಗ್ರೆಸ್ ನಲ್ಲಿ ಸಚಿವ ಸಂಪುಟ ವಿಸ್ತರಣೆಗಾಗಿ ಕಸರತ್ತು ಮುಂದುವರೆದಿದೆ. ಈ ನಡುವೆ ಸೆ.11ರಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್ ಬೆಂಗಳೂರಿಗೆ ಆಗಮಿಸಲಿದ್ದಾರೆ ಎಂದು ತಿಳಿದುಬಂದಿದೆ.