ಬೆಂಗಳೂರು : ರಾಜ್ಯದ ಜನೆತೆಗೆ ರಾಜ್ಯ ಸರ್ಕಾರ ಕರೆಂಟ್ ಶಾಕ್ ನೀಡಿದೆ. ವಿದ್ಯುತ್ ಕೊರತೆ ಹಿನ್ನಲೆಯಲ್ಲಿ ರಾಜ್ಯದಲ್ಲಿ ಈಗಿನಿಂದಲೇ ಲೋಡ್ ಶೆಡ್ಡಿಂಗ್ ಜಾರಿಗೆ ನಿರ್ಧರಿಸಲಾಗಿದೆ ಎಂದು ಇಂಧನ ಸಚಿವ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಕೆಪಿಟಿಸಿಎಲ್ ಅಧಿಕಾರಿಗಳ ಸಭೆ ಬಳಿಕ ಮಾತನಾಡಿದ ಅವರು, ಕರ್ನಾಟಕದಲ್ಲಿ ಶೇ.25ರಷ್ಟು ವಿದ್ಯುತ್ ಕೊರತೆಯಿದೆ. ಹೀಗಾಗಿ ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಆರಂಭಿಸಲು ನಿರ್ಧರಿಸಲಾಗಿದೆ ಎಂದರು.
ನಗರ ಪ್ರದೇಶಗಳಲ್ಲಿ ದಿನಕ್ಕೆ 2 ಗಂಟೆ ಲೋಡ್ ಶೆಡ್ಡಿಂಗ್ ಮಾಡಲಾಗುವುದು ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ದಿನಕ್ಕೆ 10ಗಂಟೆ ಲೋಡ್ ಶೆಡ್ಡಿಂಗ್ ಮಾಡಲಾಗುವುದು. ಅಂದರೆ ದಿನದ 5ಗಂಟೆ 3 ಫೇಸ್ ಮತ್ತು 4-6ಗಂಟೆ ಸಿಂಗಲ್ ಫೇಸ್ ವಿದ್ಯುತ್ ನೀಡಲಾಗುವುದು ಎಂದು ಸ್ಪಷ್ಟಪಡಿಸಿದರು.
ಉಷ್ಣವಿದ್ಯುತ್ ಸ್ಥಾವರಗಳಿಂದ ಶೇ.18ರಷ್ಟು ವಿದ್ಯುತ್ ಪೂರೈಕೆ ಸ್ಥಗಿತಗೊಂಡಿದೆ. ಇದರಿಂದಾಗಿ ರಾಜ್ಯದಲ್ಲಿ ವಿದ್ಯುತ್ ಅಭಾವ ಉಂಟಾಗಿದೆ ಎಂದರು.
ಅಲ್ಲದೇ ಹುಡ್ ಹುಡ್ ಚಂಡಮಾರುತ ಪ್ರಭಾವದಿಂದ ಆಂಧ್ರಪ್ರದೇಶದ ಕರಾವಳಿಯಿಂದ ರಾಜ್ಯಕ್ಕೆ ವಿದ್ಯುತ್ ಪೂರೈಕೆ ಸ್ಥಗಿತಗೊಳಿಸಲಾಗಿದೆ. ಆಂಧ್ರದ ಕರಾವಳಿಯಿಂದ ಸಿಗುತಿದ್ದ 1700 ಮೆಘಾವ್ಯಾಟ್ ವಿದ್ಯುತ್ ನಲ್ಲಿ 1000 ಮೆಘಾವ್ಯಾಟ್ ವಿದ್ಯುತ್ ಸ್ಥಗಿತಗೊಳಿಸಲಾಗಿದೆ. ಇದರಿಂದ ರಾಜ್ಯದಲ್ಲಿ ಶೇ.25ರಷ್ಟು ವಿದ್ಯುತ್ ಕೊರತೆ ಉಂಟಾಗಿದೆ. ಈ ಹಿನ್ನಲೆಯಲ್ಲಿ ಲೋಡ್ ಶೆಡ್ಡಿಂಗ್ ಜಾರಿಗೊಳಿಸಲಾಗುವುದು ಎಂದು ತಿಳಿಸಿದರು.