C V Raman Nagar : ಬೆಂಗಳೂರಿನಲ್ಲಿ ಮತ್ತೊಂದು ಲೈಂಗಿಕ ದೌರ್ಜನ್ಯ ಪ್ರಕರಣ ಬಯಲಾಗಿದೆ. ಆರ್ಕಿಡ್ಸ್ ಶಾಲೆಯ ಲೈಂಗಿಕ ದೌರ್ಜನ್ಯ ನಡೆದ ಬೆನ್ನಲ್ಲೇ ಕೇಂಬ್ರಿಡ್ಜ್ ಶಾಲೆಯಲ್ಲಿ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ವರದಿಯಾಗಿದ್ದು ಈ ರಾಕ್ಷಸೀ ಕೃತ್ಯವನ್ನು ಖಂಡಿಸಿ ಪೋಷಕರು ಹಾಗೂ ಬಿಜೆಪಿ ಕಾರ್ಯಕರ್ತರು ಶಾಲೆಯ ಮುಂದೆ ಪ್ರತಿಭಟನೆ ನಡೆಸುತ್ತಿದ್ದಾರೆ.
ಸಿ.ವಿ ರಾಮನ್ ನಗರ ವಿಧಾನಸಭಾ ಕ್ಷೇತ್ರದಲ್ಲಿ ಘಟನೆ ನಡೆದಿದ್ದು ಶಾಸಕ ಎಸ್.ರಘು ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ಕೂಡಲೇ ಶಾಲಾ ಆಡಳಿತ ಮಂಡಳಿ ಸದಸ್ಯರು ಸ್ಥಳಕ್ಕೆ ಆಗಮಿಸುವಂತೆ ಒತ್ತಾಯಿಸಿದ್ದಾರೆ.
ಕೇಂಬ್ರಿಡ್ಜ್ ಶಾಲೆಯಲ್ಲಿ 1ನೇ ತರಗತಿಯಲ್ಲಿ ವ್ಯಾಸಾಂಗ ಮಾಡುತ್ತಿರುವ 6 ವರ್ಷದ ಬಾಲಕಿ ಮೇಲೆ ಶಿಕ್ಷಕನೇ ಲೈಂಗಿಕ ದೌರ್ಜನ್ಯ ನಡೆಸಿದ್ದು ಈ ಸಂಬಂಧ ಬಾಲಕಿ ತಾಯಿ ಜೀವನ್ ಭೀಮಾನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಐಪಿಸಿ ಕಲಂ 376(ಅತ್ಯಾಚಾರ) ಹಾಗೂ ಪೋಕ್ಸೋ ಕಾಯ್ದೆ ಅನ್ವಯ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಬಾಲಕಿ ನೀಡಿದ ಸುಳಿವಿನ ಮೇಲೆ ಶಾಲೆಯ ದೈಹಿಕ ಶಿಕ್ಷಕ ಜೈಶಂಕರ್(38) ನನ್ನು ಬಂಧಿಸಿದ್ದಾರೆ.
ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಎಚ್ಚೆತ್ತುಕೊಂಡ ಬೆಂಗಳೂರು ದಕ್ಷಿಣ ಕ್ಷೇತ್ರ ಶಿಕ್ಷಣಾಧಿಕಾರಿ ರಮೇಶ್ ಅವರು ಇಂದು ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸದ್ಯ ಬಾಲಕಿಯನ್ನು ಬೌರಿಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು ತನಿಖೆ ಮುಂದುವರೆದಿದೆ.