ಬೆಂಗಳೂರು : ಶಾಲೆಗಳಲ್ಲಿ ವಿದ್ಯಾರ್ಥಿನಿಯರ ಮೇಲೆ ನಡೆಯುವ ಲೈಂಗಿಕ ದೌರ್ಜನ್ಯ ಪ್ರಕರಣಗಳನ್ನು ತಡೆಯಲು ಸಾಧ್ಯವಿಲ್ಲ, ಪೊಲೀಸರು ಶಾಲೆಯೊಳಗೆ ರಕ್ಷಣೆ ನೀಡಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಕೆ.ಜೆ ಜಾರ್ಜ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಕೇಂಬ್ರಿಡ್ಜ್ ಶಾಲೆಯಲ್ಲಿ ದೈಹಿಕ ಶಿಕ್ಷಕನಿಂದಲೇ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಗೃಹ ಸಚಿವರು. ಶಾಲೆಗಳಲ್ಲಿ ಲೈಂಗಿಕ ದೌರ್ಜನ್ಯ ತಡೆಗಟ್ಟಲು ಸಾಧ್ಯವಿಲ್ಲ. ಇಂತಹ ಪ್ರಕರಣಗಳು ನಡೆಯದಂತೆ ಶಾಲಾ ಆಡಳಿತ ವರ್ಗ, ಸಿಬ್ಬಂದಿಗಳೇ ಎಚ್ಚರ ವಹಿಸಬೇಕೆ ಹೊರತು ಪೊಲೀಸರು ಶಾಲೆಯೊಳಗೆ ರಕ್ಷಣೆ ನೀಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ಅತ್ಯಾಚಾರ ಮಾಡುವವರನ್ನು ಗುಂಡಿಟ್ಟು ಕೊಲ್ಲಬೇಕೆಂದು ಹೇಳುತ್ತೀರಿ ಆದರೆ ಅಂತಹ ವ್ಯವಸ್ಥೆ ನಮ್ಮ ಕಾನೂನಿನಲ್ಲಿ ಇಲ್ಲ. ಪ್ರತಿ ಕೋಣೆಯಲ್ಲಿ ಸಿಸಿಟಿವಿ ಅಳವಡಿಸಿ ಪ್ರತಿಯೊಂದು ಆಗು-ಹೋಗುಗಳನ್ನೂ ಗಮನದಲ್ಲಿಡಬೇಕೆಂದು ಗೃಹ ಸಚಿವರು ಸಲಹೆ ನೀಡಿದ್ದಾರೆ. ಕೇಂಬ್ರಿಡ್ಜ್ ಶಾಲೆಯಲ್ಲಿ ನಡೆದಿರುವ ಅತ್ಯಾಚಾರ ಪ್ರಕರಣದ ಆರೋಪಿಯನ್ನು ಬಂಧಿಸಲಾಗಿದೆ. ಆರೋಪಿ ಯಾರೇ ಆಗಿದ್ದರೂ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಇದೇ ವೇಳೆ ಮಾತನಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ವಿದ್ಯಾರ್ಥಿಗಳ ಬಗ್ಗೆ ಎಚ್ಚರ ವಹಿಸುವಂತೆ ಎಲ್ಲಾ ಶಾಲೆಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.