BW News Bureau : 'ಬಿಬಿಎಂಪಿ' ಗುಮಾಸ್ತನ ಮೇಲೆ ಇಂಧನ ಸಚಿವ ಡಿ.ಕೆ ಶಿವಕುಮಾರ್ ಅವರ ಬೆಂಬಲಿಗರು ಹಲ್ಲೆ ನಡೆಸಿದ್ದಾರೆ.
ಡಿ.ಕೆ.ಶಿವಕುಮಾರ್ ಬೆಂಬಲಿಗರು ಅಕ್ರಮ ನಡೆಸಿದ್ದರ ಹಿನ್ನೆಲೆಯಲ್ಲಿ ಪಾಲಿಕೆ ಗುಮಾಸ್ತ ತಿಮ್ಮೇಗೌಡ ನೊಟೀಸ್ ನೀಡಿದ್ದರು. ಇದರಿಂದ ಕೋಪಗೊಂಡ ಡಿ.ಕೆ.ಶಿ ಬೆಂಬಲಿಗರು ಬಿಬಿಎಂಪಿ ಕಚೇರಿಗೆ ನುಗ್ಗಿ ಗುಮಾಸ್ತ ತಿಮ್ಮೇಗೌಡರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ.
ಹಲ್ಲೆಗೊಳಗಾದ ಅಧಿಕಾರಿ ಖಾಸಗಿ ಆಸ್ಪತ್ರೆಯ ಐ.ಸಿ.ಯು ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಡಿಕೆಶಿ ಬೆಂಬಲಿಗರು ಹಲ್ಲೆ ನಡೆಸಿದ್ದರ ಬಗ್ಗೆ ಶ್ರೀಧರ್ ಹಾಗೂ ಭಾಸ್ಕರ್ ಎಂಬುವವರು ಬನಶಂಕರಿ ಪೊಲೀಸರಿಗೆ ದೂರು ನೀಡಿದ್ದರು. ದೂರು ದಾಖಲಿಸಿಕೊಂಡಿರುವ ಪೊಲೀಸರು ಡಿ.ಕೆ.ಶಿವಕುಮಾರ್ ಅವರ ಬೆಂಬಲಿಗ ಶಿವಕುಮಾರ್ ಅವರನ್ನು ಬಂಧಿಸಿದ್ದಾರೆ.
ಬಂಧಿತ ಶಿವಕುಮಾರ್ ವಿರುದ್ಧ ಸೆಕ್ಷನ್ 353, 504 ಹಾಗೂ 506ರ ಅಡಿ ಜೀವಬೆದರಿಕೆ, ಕೊಲೆ ಯತ್ನ ಆರೋಪದಡಿ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ. ರಾಜ್ಯದಲ್ಲಿ ಸಚಿವರು, ಶಾಸಕರ ಬೆಂಬಲಿಗರು, ಸಹೋದರರು ಅಧಿಕಾರಿಗಳ ಮೇಲೆ ಹಲ್ಲೆ ನಡೆಸುವ ಪ್ರಕರಣಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿವೆ.