BW News Bureau : 'ಕಿಸ್ ಆಫ್ ಲವ್' ಗೆ ವಿರೋಧ ವ್ಯಕ್ತಪಡಿಸಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಉಮಾಶ್ರೀ, ಬಹಿರಂಗವಾಗಿ ಚುಂಬಿಸುವುದು ನಮ್ಮ ಸಂಸ್ಕೃತಿಯಲ್ಲ ಎಂದು ಹೇಳಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಉಮಾಶ್ರೀ ನಾಲ್ಕು ಗೋಡೆಗಳ ಮಧ್ಯೆ ನಡೆಯಬೇಕಾದ ಕ್ರಿಯೆ ಬಹಿರಂಗವಾಗಿ ಮಾಡುವುದು ನಮ್ಮ ಸಂಸ್ಕೃತಿಯಲ್ಲಿ ಇಲ್ಲ. ನೈತಿಕ ಪೊಲೀಸ್ ಗಿರಿಗೆ ಕಿಸ್ ಡೇ ಉತ್ತರವಲ್ಲ ಎಂದು ಹೇಳಿದ್ದಾರೆ. ನೈತಿಕ ಪೊಲೀಸ್ ಗಿರಿಯನ್ನು ನಾವೂ ವಿರೋಧಿಸುತ್ತೇವೆ ಆದರೆ ವಿರೋಧಿಸುವ ರೀತಿ ಕಿಸ್ ಆಫ್ ಲವ್ ಮೂಲಕವಲ್ಲ ಎಂದು ಹೇಳಿದ್ದಾರೆ.
ಶ್ರೀರಾಮ ಸೇನೆಯಿಂದ ಪೊಲೀಸ್ ಆಯುಕ್ತರಿಗೆ ಮನವಿಃ
ಕಿಸ್ ಆಫ್ ಲವ್ ಕಾರ್ಯಕ್ರಮಕ್ಕೆ ಅವಕಾಶ ನೀಡಿದರೆ ಮುಂದಿನ ಪರಿಣಾಮಕ್ಕೆ ಸರ್ಕಾರವೇ ಹೊಣೆಯಾಗಲಿದೆ ಎಂದು ಶ್ರೀರಾಮ ಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಎಚ್ಚರಿಕೆ ನೀಡಿದ್ದಾರೆ.
ನ.20ರಂದು ಬೆಂಗಳೂರು ಪೊಲೀಸ್ ಆಯುಕ್ತರ ಕಚೇರಿಗೆ ತೆರಳಿ ಮನವಿ ಸಲ್ಲಿಸಿದ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್, ಕಿಸ್ಸಿಂಗ್ ಡೇ ನಡೆಸಲು ಪೊಲೀಸರು ಅವಕಾಶ ನೀಡಬಾರದು. ಒಂದು ವೇಳೆ ಅವಕಾಶ ನೀಡಿದಲ್ಲಿ ಉಗ್ರ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.