ಬೆಂಗಳೂರು : ಅರ್ಕಾವತಿ ಡಿನೋಟಿಫಿಕೇಷನ್ ಪ್ರಕರಣ ಸಂಬಂಧ ಬಿಜೆಪಿ ನಾಯಕರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮೊಕದ್ದಮೆ ಹೂಡಲು ವೇದಿಕೆ ಸಿದ್ಧಗೊಳಿಸಿದ್ದು, ಈ ಸಂಬಂಧ ರಾಜ್ಯಪಾಲರನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ.
ಅಲ್ಲದೆ ಸಿಎಂ ಸಿದ್ದರಾಮಯ್ಯ ವಿರುದ್ಧ ಸಾಮಾಜಿಕ ಕಾರ್ಯಕರ್ತರೊಬ್ಬರ ಮೂಲಕ ದೂರು ದಾಖಲಿಸಲು ಮುಂದಾಗಿದ್ದಾರೆ.
ರಾಜ್ಯಪಾಲ ವಾಜುಭಾಯಿ ವಾಲಾ ಅವರ ಹುಟ್ಟುಹಬ್ಬ ಹಿನ್ನೆಲೆಯಲ್ಲಿ ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್, ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಶಿ ಹಾಗೂ ಮಾಜಿ ಉಪ ಮುಖ್ಯಮಂತ್ರಿ ಆರ್.ಅಶೋಕ್ ನೇತೃತ್ವದ ನಿಯೋಗ ರಾಜಭವನಕ್ಕೆ ಭೇಟಿ ನೀಡಿ, ರಾಜ್ಯಪಾಲರಿಗೆ ಶುಭ ಕೋರಿದರು.
ಪಕ್ಷದ ಕಾನೂನು ಘಟಕದೊಂದಿಗೆ ರಾಜಭವನಕ್ಕೆ ತೆರಳಿದ್ದ ಬಿಜೆಪಿ ನಾಯಕರು, ಅರ್ಕಾವತಿ ಡಿನೋಟಿಫಿಕೇಷನ್ ಪ್ರಕರಣ ಸಂಬಂಧ ಸಿಎಂ ವಿರುದ್ಧ ಕೇಸ್ ದಾಖಲಿಸುವ ಕುರಿತು ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ರಾಜ್ಯಪಾಲರ ಜತೆ ಚರ್ಚಿಸಿದ್ದಾರೆ.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಶಿ, ಅರ್ಕಾವತಿ ಡಿನೋಟಿಫಿಕೇಷನ್ ಪ್ರಕರಣದ ಕುರಿತು ಯಾವುದೇ ಚರ್ಚೆ ಆಗಿಲ್ಲ. ಆದರೆ ಈ ಸಂಬಂಧ ಖಾಸಗಿ ವ್ಯಕ್ತಿಯೊಬ್ಬರು ಸಿಎಂ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಲಿದ್ದು, ಅವರಿಗೆ ಪಕ್ಷದ ಕಾನೂನು ಘಟಕ ಎಲ್ಲಾ ರೀತಿಯ ನೆರವು ನೀಡಲಿದೆ ಎಂದು ತಿಳಿಸಿದ್ದಾರೆ.
ಬಿಜೆಪಿ ಕಾನೂನು ಘಟಕದ ಬೆಂಬಲದೊಂದಿಗೆ ವಕೀಲ ನಟರಾಜ್ ಶರ್ಮಾ ಅವರು ಸಿಎಂ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಲಿದ್ದಾರೆ. ಮುಂದಿನ ಕಾನೂನು ಹೋರಾಟವನ್ನು ಸಹ ಬಿಜೆಪಿ ಕಾನೂನು ಘಟಕ ನೋಡಿಕೊಳ್ಳಲಿದೆ. ಇದಕ್ಕೆ ರಾಜ್ಯ ಬಿಜೆಪಿ ಸಂಪೂರ್ಣ ನೆರವು ನೀಡಲಿದೆ ಎಂದು ಜೋಶಿ ತಿಳಿಸಿದ್ದಾರೆ.