ಇಸ್ಲಾಮಾಬಾದ್ : 'ವಿಶ್ವಸಂಸ್ಥೆ' ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಖಾಯಂ ಸದಸ್ಯತ್ವ ನೀಡುವುದರ ಬಗ್ಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಚರ್ಚೆ ನಡೆಯುತ್ತಿದೆ. ಆದರೆ ಪಾಕಿಸ್ತಾನ ಮಾತ್ರ ಭಾರತಕ್ಕೆ ಖಾಯಂ ಸ್ಥಾನ ನೀಡಲು ತೀವ್ರ ವಿರೋಧ ವ್ಯಕ್ತಪಡಿಸಿದೆ.
ಈ ವಿಚಾರದ ಬಗ್ಗೆ ಅಮೆರಿಕಾ ಅಧ್ಯಕ್ಷ ಬರಾಕ್ ಒಬಾಮರೊಂದಿಗೆ ದೂರವಾಣಿ ಮೂಲಕ ಚರ್ಚೆ ನಡೆಸಿರುವ ಪಾಕಿಸ್ತಾನ ಪ್ರಧಾನಿ ನವಾಜ್ ಷರೀಫ್, ಭಾರತಕ್ಕೆ ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಖಾಯಂ ಸದಸ್ಯತ್ವ ನೀಡಲು ಬೆಂಬಲ ನೀಡಬಾರದೆಂದು ಹೇಳಿದ್ದಾರೆ.
ಕಾಶ್ಮೀರ ವಿವಾದದ ವಿಷಯದಲ್ಲಿ ಭಾರತ ವಿಶ್ವಸಂಸ್ಥೆಯ ನಿರ್ಣಯಗಳನ್ನು ಎಂದಿಗೂ ಅನುಸರಿಸದ ಕಾರಣ ಭದ್ರತಾ ಮಂಡಳಿಯಲ್ಲಿ ಸದಸ್ಯತ್ವ ಪಡೆಯಲು ಭಾರತಕ್ಕೆ ಅರ್ಹತೆ ಇಲ್ಲ. ಆದ್ದರಿಂದ ಭಾರತಕ್ಕೆ ಖಾಯಂ ಸದಸ್ಯತ್ವ ನೀಡಬಾರದು. ಭಾರತಕ್ಕೆ ಅಮೆರಿಕಾ ಬೆಂಬಲ ನೀಡಬಾರದು ಎಂದು ಷರೀಫ್, ಒಬಾಮ ಅವರನ್ನು ಒತ್ತಾಯಿಸಿದ್ದಾರೆ. ಇದೇ ವೇಳೆ ಪಾಕಿಸ್ತಾನಕ್ಕೆ ಪರಮಾಣು ಪೂರೈಕೆದಾರರ ತಂಡದ ಸದಸ್ಯತ್ವ ನೀಡಬೇಕೆಂದು ಮನವಿ ಮಾಡಿದ್ದಾರೆ.
ಪಾಕಿಸ್ತಾನದೊಂದಿಗೆ ಸೌಹಾರ್ದಯುತ ಮಾತುಕತೆ ನಡೆಸುವಂತೆ ಭಾರತ ಸರ್ಕಾರಕ್ಕೆ ಸಲಹೆ ನೀಡಬೇಕೆಂದೂ ಷರೀಫ್ ಅಮೆರಿಕಾ ಅಧ್ಯಕ್ಷರೊಂದಿಗಿನ ಮಾತುಕತೆಯಲ್ಲಿ ಮನವಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಭಾರತದ ಸದಸ್ಯತ್ವಕ್ಕೆ ಚೀನಾ ಬೆಂಬಲ ವ್ಯಕ್ತಪಡಿಸಿದ್ದರೆ, ಅದರ ಸಾರ್ವಕಾಲಿಕ ಮಿತ್ರ ಪಾಕಿಸ್ತಾನ ಮಾತ್ರ ವಿರೋಧ ವ್ಯಕ್ತಪಡಿಸಿದೆ.