ಶ್ರೀನಗರ : ಜಮ್ಮು-ಕಾಶ್ಮೀರದಲ್ಲಿ ಮೊದಲ ಬಾರಿಗೆ ಪಿಡಿಪಿ-ಬಿಜೆಪಿ ಮೈತ್ರಿಕೂಟದ ಸರ್ಕಾರ ಅಸ್ತಿತ್ವಕ್ಕೆ ಬಂದಿದ್ದು, ಪಿಡಿಪಿಯ ಮುಫ್ತಿ ಮೊಹಮ್ಮದ್ ಸಯೀದ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ ನೀಡಿದ ಹೇಳಿಕೆ ಇದೀಗ ಮೈತ್ರಿಕೂಟದ ಬಿಜೆಪಿಯ ಕಣ್ಣು ಕೆಂಪಾಗಿಸಿದೆ.
ಹೌದು 2014ರ ನವೆಂಬರ್-ಡಿಸೆಂಬರ್ ತಿಂಗಳಲ್ಲಿ ಕಣಿವೆ ರಾಜ್ಯದಲ್ಲಿ ಐದು ಹಂತಗಳಲ್ಲಿ ಚುನಾವಣೆ ಶಾಂತಿಯುತವಾಗಿ ಮತ್ತು ಯಶಸ್ವಿಯಾಗಿ ನಡೆಯಲು ಪಾಕಿಸ್ತಾನ, ಹುರಿಯತ್ ಕಾನ್ಫರೆನ್ಸ್ ಹಾಗೂ ಉಗ್ರಗಾಮಿ ಸಂಘಟನೆಗಳ ಅನುಕೂಲಕರ ವಾತಾವರಣವೇ ಕಾರಣ ಎಂದು ನೂತನ ಸಿಎಂ ಮುಫ್ತಿ ಮೊಹಮ್ಮದ್ ಸಯೀದ್ ಪ್ರಮಾಣವಚನ ಸ್ವೀಕರಿಸಿದ ನಂತರದ ಮೊದಲ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಜಮ್ಮು ಕಾಶ್ಮೀರದ ವಿಧಾನಸಭಾ ಚುನಾವಣೆಗೆ ಪಾಕಿಸ್ತಾನ, ಹುರಿಯತ್ ಮತ್ತು ಉಗ್ರರು ಅನುಕೂಲಕರ ವಾತಾವರಣ ಕಲ್ಪಿಸಿಕೊಟ್ಟಿದ್ದರಿಂದಲೇ ಯಶಸ್ವಿಯಾಗಿ ನಡೆಯಲು ಸಾಧ್ಯವಾಯಿತು ಎಂದು ಮುಫ್ತಿ ಹೇಳಿರುವುದು ಇದೀಗ ವಿವಾದಕ್ಕೆ ಎಡೆಮಾಡಿಕೊಟ್ಟಿದೆ.