ನವದೆಹಲಿ : 2001ರಲ್ಲಿ ಸಂಸತ್ ಮೇಲೆ ದಾಳಿ ನಡೆಸಿದ್ದ ಉಗ್ರ ಅಪ್ಜಲ್ ಗುರುಗೆ ಅನ್ಯಾಯ ಮಾಡಲಾಗಿದೆ ಎಂದು ಕಾಂಗ್ರೆಸ್ ನಾಯಕ, ರಾಜ್ಯಸಭಾ ಸದಸ್ಯ ಮಣಿಶಂಕರ್ ಅಯ್ಯರ್ ಹೇಳಿದ್ದಾರೆ.
ಟ್ವಿಟರ್ ನಲ್ಲಿ ಅಭಿಪ್ರಾಯ ಹಂಚಿಕೊಂಡಿರುವ ಮಣಿಶಂಕರ್ ಅಯ್ಯರ್, ಯಾವುದೇ ಸೂಕ್ತ ಸಾಕ್ಷ್ಯಾಧಾರಗಳಿಲ್ಲದೇ ಉಗ್ರ ಅಫ್ಜಲ್ ನನ್ನು ಗಲ್ಲಿಗೇರಿಸಿದ್ದಕ್ಕೆ ತಮಗೆ ಅಸಮಾಧಾನವಾಗಿದೆ ಎಂದು ಹೇಳಿದ್ದಾರೆ. ಸಂಸತ್ ಭವನದ ಮೇಲೆ ನಡೆದಿದ್ದ ಉಗ್ರರ ದಾಳಿಯಲ್ಲಿ ಅಪ್ಜಲ್ ಗುರು ಪ್ರಮುಖ ಪಾತ್ರ ವಹಿಸಿದ್ದ. ಅಫ್ಜಲ್ ಗುರು ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ 2013ರಲ್ಲಿ ಆತನನ್ನು ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಗಲ್ಲಿಗೇರಿಸಿತ್ತು.
ಜಮ್ಮು-ಕಾಶ್ಮೀರದಲ್ಲಿ ಪಿಡಿಪಿ-ಬಿಜೆಪಿ ಸಮ್ಮಿಶ್ರ ಸರ್ಕಾರ ರಚನೆಯಾದ ಬೆನ್ನಲ್ಲೇ ಅಫ್ಜಲ್ ಗುರುಗೆ ವಿಧಿಸಿರುವ ಗಲ್ಲು ಶಿಕ್ಷೆ ಅನ್ಯಾಯವಾದದ್ದು ಎಂದು ಅಸಮಾಧಾನ ಹೊರಹಾಕಿದ್ದ ಪಿಡಿಪಿ, ತಿಹಾರ್ ಜೈಲಿನಲ್ಲಿರುವ ಆತನ ಮರ್ತ್ಯ ಅವಶೇಷಗಳನ್ನು ನೀಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿತ್ತು. ಪಿಡಿಪಿ ಬೇಡಿಕೆಗೆ ದನಿಗೂಡಿಸಿರುವ ಮಣಿಶಂಕರ್ ಅಯ್ಯರ್, ಸಂಸತ್ ಮೇಲೆ ದಾಳಿ ನಡೆಸಿದ್ದ ಉಗ್ರ ಅಫ್ಜಲ್ ಗುರುವಿಗೆ ಗಲ್ಲು ಶಿಕ್ಷೆ ವಿಧಿಸುವ ಮೂಲಕ ಆತನಿಗೆ ಅನ್ಯಾಯ ಉಂಟುಮಾಡಲಾಗಿದೆ. ಇದರಿಂದ ತಮ್ಮ ಮನಸ್ಸಿಗೆ ನೋವುಂಟಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.
ಮಣಿಶಂಕರ್ ಅಯ್ಯರ್ ಅವರ ಈ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಚರ್ಚೆಗೆ ಗುರಿಯಾಗಿದೆ.