ಬೆಂಗಳೂರು : ಉನ್ನತ ಶಿಕ್ಷಣ ಸಚಿವ ಆರ್.ವಿ ದೇಶಪಾಂಡೆ ವಿರುದ್ಧದ ಲೋಕಾಯುಕ್ತ ತನಿಖೆಗೆ ಹೈಕೋರ್ಟ್ ನ ಏಕ ಸದಸ್ಯ ಪೀಠ ಮಧ್ಯಂತರ ತಡೆ ನೀಡಿದೆ.
ಆರ್.ವಿ ದೇಶಪಾಂಡೆ ಅವರ ವಿರುದ್ಧ ಐಟಿ ಕಾರಿಡಾರ್ ಯೋಜನೆಯಲ್ಲಿ ಭಾರಿ ಪ್ರಮಾಣದ ಅಕ್ರಮ ನಡೆಸಿರುವ ಆರೋಪ ಕೇಳಿ ಬಂದಿತ್ತು. ಈ ಪ್ರಕರಣದ ಬಗ್ಗೆ ಲೋಕಾಯುಕ್ತ ತನಿಖೆ ನಡೆಸಬೇಕೆಂದು ಲೋಕಾಯುಕ್ತ ವಿಶೇಷ ಕೋರ್ಟ್ ಫೆ.18ರಂದು ಆದೇಶಿಸಿತ್ತು.
ಲೋಕಾಯುಕ್ತ ವಿಶೇಷ ಕೋರ್ಟ್ ತೀರ್ಪನ್ನು ಆರ್.ವಿ ದೇಶಪಾಂಡೆ ಹೈಕೋರ್ಟ್ ನಲ್ಲಿ ಪ್ರಶ್ನಿಸಿದ್ದರು. ದೇಶಪಾಂಡೆ ಪರ ವಕೀಲರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ದೇಶಪಾಂಡೆ ವಿರುದ್ಧದ ತನಿಖೆಗೆ ಮಧ್ಯಂತರ ತಡೆ ಆದೇಶ ಹೊರಡಿಸಿದೆ.
ಐಟಿ ಕಾರಿಡಾರ್ ಯೋಜನೆ ಮತ್ತು ಕೈಗಾರಿಕೆ ವಲಯ ಆರಂಭಕ್ಕಾಗಿ ಭೂ ಹಂಚಿಕೆ ಮಾಡುವಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ವಾಸುದೇವ ರೆಡ್ಡಿ ಎಂಬವರು ಲೋಕಾಯುಕ್ತ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು. ದೂರಿನ ಅನ್ವಯ ದೇಶಪಾಂಡೆ ವಿರುದ್ಧ ತನಿಖೆ ಕೈಗೊಳ್ಳಲಾಗಿತ್ತು.