BW News Bureau : ಐ.ಎ.ಎಸ್ ಅಧಿಕಾರಿ ಡಿ.ಕೆ ರವಿ ಅವರ ಸಾವಿನ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಬೇಕೆಂದು ಒತ್ತಾಯಿಸಿ, ರಾಜ್ಯ ಒಕ್ಕಲಿಗ ಸಂಘದ ಸದಸ್ಯರು ಕಿಮ್ಸ್ ಆಸ್ಪತ್ರೆಯಿಂದ ಫ್ರೀಡಂ ಪಾರ್ಕ್ ವರೆಗೂ ಪ್ರತಿಭಟನಾ ಮೆರವಣಿಗೆ ನಡೆಸುತ್ತಿದ್ದಾರೆ.
ಸಿಬಿಐ ತನಿಖೆಗೆ ಒತ್ತಾಯಿಸಿ ನಡೆಸುತ್ತಿರುವ ಪ್ರತಿಭಟನೆಯಲ್ಲಿ 5 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದಾರೆ. ಮಾಜಿ ಸಚಿವ ವಿ.ಸೋಮಣ್ಣ, ಮಾಜಿ ಸಿ.ಎಂ ಹೆಚ್.ಡಿ.ಕುಮಾರಸ್ವಾಮಿ ಮುಂತಾದವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ.
ರವಿ ಪ್ರಕರಣವನ್ನು ಸಿಬಿಐಗೆ ನೀಡಬೇಕೆಂಬ ಒತ್ತಾಯ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ, ಆದರೆ ಸರ್ಕಾರದ ಮೊಂಡುತನ ಮುಂದುವರೆದಿದ್ದು, ರಾಜ್ಯದ ಜನತೆಯ ಆಕ್ರೋಶ ಮತ್ತಷ್ಟು ಹೆಚ್ಚಿದೆ.
ರವಿ ಪ್ರಕರಣದ ತನಿಖೆಗೆ ಬಗ್ಗೆ ಖಾಸಗಿ ವಾಹಿನಿಯೊಂದರ ಮೂಲಕ ಅಭಿಪ್ರಾಯ ವ್ಯಕ್ತಪಡಿಸಿರುವ ನಿವೃತ್ತ ಲೋಕಾಯುಕ್ತ ನ್ಯಾ.ಸಂತೋಷ್ ಹೆಗ್ಡೆ ಅವರು ರವಿ ಸಾವಿನ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವುದೇ ಸೂಕ್ತ ಎಂದು ಹೇಳಿದ್ದಾರೆ.
ಇದೇ ವೇಳೆ ಮಾತನಾಡಿರುವ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಹೆಚ್.ಎಸ್ ದೊರೆಸ್ವಾಮಿ, ಪ್ರಕರಣದ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆಯುವುದಾಗಿ ತಿಳಿಸಿದ್ದಾರೆ.