ಬೆಂಗಳೂರು : ರಾಜ್ಯದಲ್ಲಿನ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಹಮ್ಮಿಕೊಳ್ಳಬೇಕಾದ ಹೋರಾಟ, ಕಾರ್ಯಕ್ರಮಗಳ ಬಗ್ಗೆ ಚರ್ಚಿಸಲು ಶುಕ್ರವಾರ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ ನಡೆಯಲಿದೆ.
ಬರ ಅಧ್ಯಯನ ನಡೆಸುವ ಸಂಬಂಧ ಪಕ್ಷದ ಹಿರಿಯ ನಾಯಕರ ನೇತೃತ್ವದಲ್ಲಿ ಆರೇಳು ತಂಡಗಳನ್ನು ರಚಿಸಲು ಉದ್ದೇಶಿಸಲಾಗಿದ್ದು, ಈ ಸಭೆಯಲ್ಲಿ ಅಂತಿಮಗೊಳ್ಳಲಿದೆ.
ಇದರೊಂದಿಗೆ ಭ್ರಷ್ಟಾಚಾರ ನಿಗ್ರಹ ದಳ ರಚನೆ ವಿವಾದ ಹಾಗೂ ವಕ್ಫ್ ಆಸ್ತಿ ಒತ್ತುವರಿ ಕುರಿತ ಅನ್ವರ್ ಮಾಣಿಪ್ಪಾಡಿ ವರದಿ ಕುರಿತಂತೆ ಉಂಟಾಗಿರುವ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ಮುಂದೆ ಕೈಗೊಳ್ಳಬೇಕಾದ ಹೋರಾಟದ ಬಗ್ಗೆಯೂ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ.