ಬ್ರುಸೆಲ್ಸ್ : ಬೆಲ್ಜಿಯಂ ಪ್ರವಾಸದಲ್ಲಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ರಾಕೇಶ್ ಬಹು ಅಂಗಾಂಗ ವೈಫಲ್ಯದಿಂದ ನಿಧನರಾಗಿದ್ದಾರೆ.
ತೀವ್ರ ಅನಾರೋಗ್ಯಕ್ಕೆ ತುತ್ತಾಗಿದ್ದ ರಾಕೇಶ್ ಅವರಿಗೆ ಬೆಲ್ಜಿಯಂನ ಬ್ರುಸೆಲ್ಸ್ ಯುನಿವರ್ಸಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಸ್ನೇಹಿತರ ಜೊತೆಗೆ ಬೆಲ್ಜಿಯಂ ಪ್ರವಾಸಕ್ಕೆ ತೆರಳಿದ್ದ ಅವರು ಅನಾರೋಗ್ಯದಿಂದ ಕಳೆದ ಶನಿವಾರ ಇಲ್ಲಿನ ಆಸ್ಪತ್ರೆಗೆ ದಾಖಲಾಗಿದ್ದರು.
ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು, ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳೆದಿದ್ದಾರೆ. 39 ವರ್ಷದ ರಾಕೇಶ್ ಅವರು ಇಬ್ಬರು ಮಕ್ಕಳು ಹಾಗೂ ಪತ್ನಿಯನ್ನು ಅಗಲಿದ್ದಾರೆ.
ರಾಕೇಶ್ ಅವರಿಗೆ ಮೊದಲಿನಿಂದಲೂ ಯಕೃತ್ತಿನ ಸಮಸ್ಯೆ ಇತ್ತು. ಪ್ರವಾಸದ ವೇಳೆ ರಕ್ತದೊತ್ತಡ ಕಡಿಮೆಯಾಗಿ ಕುಸಿದು ಬಿದ್ದಿದ್ದ ಅವರನ್ನು ಸ್ನೇಹಿತರು ಆಸ್ಪತ್ರೆಗೆ ದಾಖಲಿಸಿದ್ದರು. ರಾಕೇಶ್ ಅವರ ಆರೋಗ್ಯ ಸಂಪೂರ್ಣ ಸುಧಾರಿಸಿಲ್ಲ. ಆದರೆ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ಅವರ ಆರೋಗ್ಯ ಸ್ಥಿರವಾಗಿದೆ. ಚಿಕಿತ್ಸೆಗೆ ಸ್ಪಂದಿಸುತ್ತಿದ್ದರೂ ಅವರಿಗೆ ಇನ್ನೂ ನಾಲ್ಕೈದು ದಿನಗಳ ಕಾಲ ತೀವ್ರ ನಿಗಾ ಘಟಕದಲ್ಲಿಯೇ ಚಿಕಿತ್ಸೆ ಮುಂದುವರಿಯಲಿದೆ ಎಂದು ಮುಖ್ಯಮಂತ್ರಿ ಕಚೇರಿ ಮೂಲಗಳು ನಿನ್ನೆಯಷ್ಟೇ ಮಾಹಿತಿ ನೀಡಿದ್ದವು.
ಸಿಎಂ ಪುತ್ರನ ಅಕಾಲಿಕ ನಿಧನಕ್ಕೆ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಹಾಗೂ ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.