ಬೆಂಗಳೂರು : ರಾಜ್ಯ ಸರ್ಕಾರ ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡುಗಡೆ ಮಾಡಿರುವುದನ್ನು ವಿರೋಧಿಸಿ ಪ್ರತಿಭಟನೆಗಳು ಭುಗಿಲೆದ್ದಿದ್ದು, ಮಂಡ್ಯದಲ್ಲಿ ನಡೆಯುತ್ತಿರುವ ಪ್ರತಿಭಟನೆ ವಿಕೋಪಕ್ಕೆ ತಿರುಗಿದೆ.
ಮಂಡ್ಯದ ಮಾರ್ಕೆಟ್ ಬೀದಿಯಲ್ಲಿ ಪ್ರತಿಭಟನಾಕಾರರು ಅಂಗಡಿಗಳ ಮೇಲೆ ಕಲ್ಲು ತೂರಾಟ ನಡೆಸಿದ್ದು ಬಲವಂತವಾಗಿ ಅಂಗಡಿಗಳನ್ನು ಮುಚ್ಚಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಪ್ರತಿಭಟನಾಕಾರರ ಮೇಲೆ ಲಾಠಿಚಾರ್ಜ್ ಮಾಡಿದ ಘಟನೆ ನಡೆದಿದೆ.
ಬೆಂಗಳೂರಿನಲ್ಲಿಯೂ ಕನ್ನಡಪರ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಮೈಸೂರು ಬ್ಯಾಂಕ್ ವೃತ್ತದ ಬಳಿ ಜಮಾಯಿಸಿರುವ ಪ್ರತಿಭಟನಾಕಾರರು, ಮುಖ್ಯಮಂತ್ರಿ ಸಿದ್ದರಾಮಯ್ಯ, ಜಲ ಸಂಪನ್ಮೂಲ ಸಚಿವ ಎಂ.ಬಿ ಪಾಟೀಲ್ ಹಾಗೂ ತಮಿಳುನಾಡು ಸಿಎಂ ಜಯಲಲಿತಾ ಅವರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರೈತರಿಗೆ ಅನ್ಯಾಯವೆಸಗುತ್ತಿರುವ ರಾಜ್ಯ ಸರ್ಕಾರದ ವಿರುದ್ದ ಘೋಷಣೆ ಕೂಗಿರುವ ಪ್ರತಿಭಟನಾಕಾರರು, ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡುವಂತೆ ಆಗ್ರಹಿಸಿದ್ದಾರೆ.