ಬೆಂಗಳೂರು : ತಮಿಳುನಾಡಿಗೆ ಸೆ.20ರವರೆಗೆ ನಿತ್ಯ 12ಸಾವಿರ ಕ್ಯೂಸೆಕ್ ನೀರು ಹರಿಸಬೇಕೆಂದು ಸುಪ್ರೀಂ ಕೋರ್ಟ್ ನೀಡಿದ ತೀರ್ಪಿನ ವಿರುದ್ಧ ಮತ್ತು ತಮಿಳುನಾಡಿನಲ್ಲಿ ಕನ್ನಡಿಗರ ಮೇಲೆ ಹಲ್ಲೆ ನಡೆಸಿದ್ದನ್ನು ಖಂಡಿಸಿ ಕನ್ನಡಪರ ಸಂಘಟನೆಗಳ ಆಕ್ರೋಶಕ್ಕೆ ರಾಜಧಾನಿ ಬೆಂಗಳೂರು ಸೇರಿದಂತೆ ಕಾವೇರಿ ಕಣಿವೆ ಪ್ರದೇಶ ಹೊತ್ತಿ ಉರಿದಿದೆ.
ಬೆಂಗಳೂರಿನಲ್ಲಿ ನೂರಾರು ವಾಹನಗಳಿಗೆ ಬೆಂಕಿ ಹಚ್ಚಿದ ಗಲಭೆಕೋರರನ್ನು ನಿಯಂತ್ರಿಸಲು ಪೊಲೀಸರು ಗಾಳಿಯಲ್ಲಿ ಹಾರಿಸಿದ ಗುಂಡು ತಗುಲಿ ಒಬ್ಬ ಸಾವನ್ನಪ್ಪಿದ್ದಾನೆ. ಡಿಸಿಪಿ ಸೇರಿದಂತೆ ಹಲವು ಪೊಲೀಸರು ಗಾಯಗೊಂಡಿದ್ದಾರೆ. ಬೆಂಗಳೂರಿನಾದ್ಯಂತ ಉದ್ವಿಗ್ನ ಪರಿಸ್ಥಿತಿ ಉಂಟಾದ ಹಿನ್ನಲೆಯಲ್ಲಿ ನಗರದಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ನಿಷೇಧಾಜ್ಞೆಯನ್ನು ಸೆಪ್ಟೆಂಬರ್ 14ರವರೆಗೂ ವಿಸ್ತರಿಸಲಾಗಿದೆ.
ನಗರದ ರಾಜಗೋಪಾಲನಗರ, ಕಾಮಾಕ್ಷಿಪಾಳ್ಯ, ವಿಜಯನಗರ, ಬ್ಯಾಟರಾಯನಪುರ, ಕೆಂಗೇರಿ, ಮಾಗಡಿ ರಸ್ತೆ, ರಾಜಾಜಿನಗರ, ರಾಜರಾಜೇಶ್ವರಿ ನಗರ, ಕೆಪಿ ಅಗ್ರಹಾರ, ಚಂದ್ರಾ ಲೇಔಟ್, ಯಶವಂತಪುರ, ಮಹಾಲಕ್ಮೀ ಲೇಔಟ್, ಪೀಣ್ಯ, ಆರ್.ಎಂ.ಸಿ.ಯಾರ್ಡ್, ನಂದಿನಿ ಲೇಔಟ್, ಜ್ಞಾನಭಾರತಿ ಪಿಎಸ್ ಪ್ರದೇಶಗಳಲ್ಲಿ ಕರ್ಫ್ಯೂ ಜಾರಿ ಮಾಡಲಾಗಿದೆ.
ಕೆಲ ಸೂಕ್ಷ್ಮ ಪ್ರದೇಶಗಳಲ್ಲಿ ಮತ್ತು ತಮಿಳರು ಹೆಚ್ಚಾಗಿ ಇರುವ ಪ್ರದೇಶಗಳಲ್ಲಿ ಭದ್ರತೆ ಹೆಚ್ಚಿಸಲಾಗಿದೆ. ಈ ನಡುವೆ ಪರಿಸ್ಥಿತಿ ನಿಯಂತ್ರಿಸಲು 1000 ಅರೆಸೇನಾ ಪಡೆಯನ್ನು ಕೇಂದ್ರ ಸರ್ಕಾರ ರವಾನಿಸಿದೆ.