ಬೆಂಗಳೂರು : ಕಾವೇರಿ ನದಿ ನೀರು ವಿವಾದದ ವಿಚಾರವಾಗಿ ರಾಜ್ಯದಲ್ಲಿ ಪ್ರತಿಭಟನೆ ಭುಗಿಲೆದ್ದಿದ್ದು, ರಾಜ್ಯದಲ್ಲಿ ನಡೆದಿರುವ ಬೆಳವಣಿಗೆಗಳು ಹಾಗೂ ಕಾನೂನು ಸುವ್ಯವಸ್ಥೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಂಗ್ರೆಸ್ ಹೈಕಮಾಂಡ್ ಗೆ ಮಾಹಿತಿ ನೀಡಿದ್ದಾರೆ.
ರಾಜ್ಯದಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಕಾನೂನು ಸುವ್ಯವಸ್ಥೆ ಹತೋಟಿಯಲ್ಲಿದೆ ಎಂದು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ, ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಹಾಗೂ ರಾಜ್ಯದ ಉಸ್ತುವಾರಿ ದಿಗ್ವಿಜಯ್ ಸಿಂಗ್ ಅವರಿಗೆ ಸಿದ್ದರಾಮಯ್ಯ ತಿಳಿಸಿದ್ದಾರೆ.
ಹೈಕಮಾಂಡ್ ಗೆ ರಾಜ್ಯದ ಪರಿಸ್ಥಿತಿ ಕುರಿತು ವಿವರಣೆ ನೀಡಿರುವ ಸಿಎಂ ಸಿದ್ದರಾಮಯ್ಯ, ಕಾವೇರಿ ವಿಚಾರವಾಗಿ ತಮಿಳುನಾಡಿನಲ್ಲಿ ಕನ್ನಡಿಗರ ಮೇಲೆ ನಡೆದ ಹಲ್ಲೆಯೇ ರಾಜ್ಯದಲ್ಲಿ ಪ್ರತಿಭಟನೆ ಭುಗಿಲೇಳಲು ಪ್ರಮುಖ ಕಾರಣವೆಂದು ತಿಳಿಸಿದ್ದಾರೆ ಎನ್ನಲಾಗಿದೆ.